ಧಾರವಾಡ ಫೆ.9: ಬರುವ ಫೆಬ್ರವರಿ 24 ರಂದು ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವಲಗುಂದ ಪಟ್ಟಣಕ್ಕೆ ಆಗಮಿಸಿ, ನವಲಗುಂದ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಚಾಲನೆ ಹಾಗೂ ಲೋಕಾರ್ಪಣೆ ಕಾರ್ಯ ನೆರವೇರಿಸಲಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳ ಕುರಿತು ವರದಿ ಸಲ್ಲಿಸುವಂತೆ ಶಾಸಕ ಎನ್.ಎಚ್.ಕೋನರಡ್ಡಿ ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ತಿಳಿಸಿದರು.
ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ಹಾಗೂ ನವಲಗುಂದ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಇಲ್ಲದ 2000 ಬಡ ಜನತೆಗೆ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ ಹಾಗೂ ಎಲ್ಲ 5 ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ನವಲಗುಂದ ಪಟ್ಟಣದ ಮಾಡಲ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿಯೇ ಗ್ರಾಮೀಣ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಲು ಚಕ್ಕಡಿ ರಸ್ತೆಗಳನ್ನು ಅಗಲೀಕರಣ ಮಾಡಿ ಹೆದ್ದಾರಿ ತರಹ ಅಭಿವೃದ್ಧಿಪಡೆಸಿದ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ವೀಕ್ಷಣೆ ಮಾಡಲಿದ್ದಾರೆ.
ಮುಖ್ಯಮಂತ್ರಿಗಳು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿದ 41 ಎಕರೆ ಆಶ್ರಯ ಬಡಾವಣೆಯಲ್ಲಿ ಅಂದಾಜು 1 ಸಾವಿರ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ, ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿದ 19 ಎಕರೆ ಆಶ್ರಯ ಬಡಾವಣೆಯಲ್ಲಿ 350 ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ, ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನವಲಗುಂದ ತಾಲ್ಲೂಕಿನ ಅಳಗವಾಡಿ, ತಡಹಾಳ, ಹಣಸಿ, ಶಿರಕೋಳ, ಅಣ್ಣಿಗೇರಿ ತಾಲ್ಲೂಕಿನ ನಲವಡಿ, ಅರೇಕುರಹಟ್ಟಿ, ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ಲ ಮುಂತಾದ ಗ್ರಾಮಗಳಲ್ಲಿ 1000 ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು.
ನವಲಗುಂದ ನಗರದ ಮಂಜುನಾಥನಗರದಲ್ಲಿ ರೂ. 60 ಲಕ್ಷ ಅನುದಾನದಲ್ಲಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮ, ನವಲಗುಂದ ನಗರದಲ್ಲಿ ರೂ. 4.50 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆ, ನವಲಗುಂದ ನಗರದ ಹರಳಯ್ಯ ಸಮಾಜದ ಓಣಿಯಲ್ಲಿ ರೂ. 60 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಮುದಾಯ ಭವನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, ನವಲಗುಂದ ನಗರದ ಸಿದ್ದರಾಮೇಶ್ವರ ನಗರದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮ, ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಹುಬ್ಬಳ್ಳಿ ಹಾಗೂ ಅಣ್ಣಿಗೇರಿ ತಾಲ್ಲೂಕುಗಳಲ್ಲಿ ಶಿಕ್ಷಣ ಇಲಾಖೆಯ ವಿವೇಕ ಯೋಜನೆಯಡಿ ನೂತನವಾಗಿ ನಿರ್ಮಿಸಿದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ, ಪದವಿ ಕಾಲೇಜುಗಳ ಅಂದಾಜು 35 ಕೊಠಡಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮ, ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 15 ಕ್ಕೂ ಹೆಚ್ಚು ಅಂಗನವಾಡಿ ಕಟ್ಟಡಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮ, ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಹುಬ್ಬಳ್ಳಿ ಹಾಗೂ ಅಣ್ಣಿಗೇರಿ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗ್ರಾಮೀಣಾಬಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆಯಡಿ ರಾಜ್ಯದಲ್ಲೇ ಮಾದರಿ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ತರಹ ನಿರ್ಮಿಸುತ್ತಿರುವ ಕಾಮಗಾರಿಗಳಿಗೆ ಚಾಲನೆ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ ಹಂಚಿಕೆ ಮಾಡಿದ ಅನುದಾನದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪಶು ಸಂಗೋಪನಾ ಇಲಾಖೆಯಿಂದ ನಿರ್ಮಿಸಿದ ಅಣ್ಣಿಗೇರಿ ಪಶು ಆಸ್ಪತ್ರೆ ಉದ್ಘಾಟನೆ ಹಾಗೂ ಇಂಗಳಹಳ್ಳಿಯಲ್ಲಿ ರೂ. 60 ಲಕ್ಷ ವೆಚ್ಚದಲ್ಲಿ ನೂತನ ಪಶು ಆಸ್ಪತ್ರೆಗೆ ಶಂಕುಸ್ಥಾಪನಾ ಕಾರ್ಯಕ್ರಮ, ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ರೂ. 1.80 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೆÇಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿನ ನೀರಾವರಿ ಇಲಾಖೆಯ ವಿವಿಧ ಕಡ್ಡಟಗಳ ಉದ್ಘಾಟನೆ ಹಾಗೂ ಮಲಪ್ರಭಾ ಬಲದಂಡೆ ಕಾಲುವೆಯ ಆಧುನೀಕರಣ ಕಾಮಗಾರಿಳ ವೀಕ್ಷಣೆ, ನವಲಗುಂದ ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ರೂ. 5.0 ಕೋಟಿ ಅನುದಾನ ನೀಡಿದ ಬಗ್ಗೆ, ನವಲಗುಂದ ವಿಧಾನಸಭಾ ಕ್ಷೇತ್ರದ 5 ಗ್ಯಾರೆಂಟಿ ಮೂಲಕ ತಾವು ನೀಡಿದ ಭರವಸೆಯಂತೆ ಎಲ್ಲ ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಹಾಗೂ ಉಳಿದ ವಿವಿಧ ಇಲಾಖೆಯಿಂದ ನಿರ್ಮಿಸಿದ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಎರಡು ಫಲಾನುಭವಿಗಳ ಸಮಾವೇಶಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದು, ಬರುವ ಫೆಬ್ರವರಿ 24 ರಂದು ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮವನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ರೂಪಿಸಬೇಕು. ತಹಶೀಲ್ದಾರ ನೇತೃತ್ವದಲ್ಲಿ ತಾಲೂಕು ಮಟ್ಟದ ವಿವಿಧ ಸಮಿತಿಗಳನ್ನು ರಚಿಸಿ, ಕಾರ್ಯ ಹಂಚಿಕೆ ಮಾಡಬೇಕೆಂದು ಹೇಳಿದರು.
ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮ ಇರುವ್ಯದರಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ನಿಯಮಾನುಸಾರ ಸಿದ್ಧಗೊಳಿಸಬೇಕೆಂದು ಅವರು ಸೂಚಿಸಿದರು.
ವೇದಿಕೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಉಪಸ್ಥಿತರಿದ್ದರು.
ಸಭೆಯಲ್ಲಿ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.