ಬೆಂಗಳೂರು: ಜೂನ್ 12:- ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದುಕೊಂಡಂತೆ ನಗರಾಭಿವೃದ್ಧಿ ಇಲಾಖೆಯ ವತಿಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್ ಸುರೇಶ (ಬೈರತಿ) ರವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಸಭೆ ನಡೆಸಿದರು.

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಇಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು, ಈಗ ಅದು ಮುಕ್ತಾಯವಾಗಿರುವುದರಿಂದ Township ನಿರ್ಮಾಣದ ಬಗ್ಗೆ ಗಮನ ಹರಿಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳಿಗೆ ಸಚಿವರಾದ ಬೈರತಿ ಸುರೇಶ ರವರು ಸೂಚಿಸಿದರು.

ಹಾಸನ, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೋಲಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ರಸ್ತೆಗೆ ಡಾಂಬರೀಕರಣ, ರಸ್ತೆ ನಿರ್ಮಾಣ ಹಾಗೂ ರಿಂಗ್ ರಸ್ತೆ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು. ಅಲ್ಲದೆ ಮೈಸೂರು ರಿಂಗ್ ರಸ್ತೆ ನಿರ್ಮಾಣ ಮಾಡಲು ಕೆಲ ಅಡೆತಡೆಗಳು ಎದುರಾಗಿದ್ದು, ಮತ್ತೆ Short time Re-tender ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವಂತೆಯೇ ಇತರೆ ಮಹಾನಗರ ಪಾಲಿಕೆಗಳಲ್ಲಿಯೂ Corporation ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದ್ದು, ಎಲ್ಲೆಲ್ಲಿ ತೆರೆಯಲು ಸಾಧ್ಯವಿದೇ ಎನ್ನುವುದನ್ನು ಪರಿಶೀಲಿಸಿ. ಅಲ್ಲದೇ, ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ Corporation ಶಾಲೆಗಳನ್ನು ತೆರೆಯಲು ಸಾಧ್ಯವೇ ಎನ್ನುವುದನ್ನು ಪರಿಶೀಲಿಸಿ ತಿಳಿಸುವಂತೆ ಸಚಿವರಾದ ಬೈರತಿ ಸುರೇಶ ರವರು ಅಧಿಕಾರಿಗಳಿಗೆ ತಿಳಿಸಿದರು.

ಮಹಾನಗರ ಪಾಲಿಕೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ವೇಳೆ ಹೆಚ್ಚು ಇದ್ದರೆ, ಕಡಿಮೆ ಮಾನವ ಸಂಪನ್ಮೂಲ ಇರುವ ಜಾಗಕ್ಕೆ ನಿಯೋಜನೆ ಮಾಡಲು ಸಾಧ್ಯವೇ ಎನ್ನುವುದನ್ನು ತಿಳಿಸಲು ಮಾನ್ಯ ಸಚಿವರು ಕಾರ್ಯದರ್ಶಿಗಳಿಗೆ ಸೂಚಿಸಿದರು.

ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು ಸೇರಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ಎರವಲು ಸೇವೆ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಪೂರ್ಣಗೊಳಸುವಂತೆ ಮಾನ್ಯ ಸಚಿವರು ಸಭೆಯಲ್ಲಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಮೃತ್ 2.0 ಯೋಜನೆಯಡಿಯಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಗಲುವ ಹಣದ ವೆಚ್ಚ ಕುರಿತಂತೆ ಕ್ರಿಯಾಯೋಜನೆ ರೂಪಿಸಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವರಾದ ಬೈರತಿ ಸುರೇಶ ರವರು ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್.ಬಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕರಾದ ತಿಪ್ಪೇಸ್ವಾಮಿ, ಪೌರಾಡಳಿತ ನಿರ್ದೇಶನಲಾಯದ ಜಂಟಿ ನಿರ್ದೇಶಕರಾದ ವಿಜಯ ಕುಮಾರ್, ಮುಖ್ಯ ಅಭಿಯಂತರ ಚಂದ್ರಪ್ಪ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here