ಮೈಸೂರು,3ಸೆಪ್ಟೆಂಬರ್: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿಯ ಸನ್ನಿಧಿಯಲ್ಲಿ ಉದ್ಘಾಟಿಸಿ ಪ್ರಸ್ತಾವಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದರು.
ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿವರ್ಗಕ್ಕೆ ಎಚ್ಚರಿಕೆ ನೀಡಿದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉತ್ಕೃಷ್ಟ ದರ್ಜೆಯ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ.
ಹಿಂದೆಯೂ ಸಮಿತಿ ಇತ್ತು. ಆದರೆ ಈಗ ಪ್ರಾಧಿಕಾರದ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದು ಈ ಸಂಧರ್ಬದಲ್ಲಿ ಹೇಳಿದರು.
ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು.
ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಸುತ್ತಮುತ್ತಲಿನ ಪ್ರದೇಶದ ಶುಚಿತ್ವಕ್ಕೆ ಹೆಚ್ಚು ಶ್ರಮ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು.
ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆಂದು ಪುನರುಚ್ಛರಿಸಿದರು.
ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿಯ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು.
ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದು ಮುಖ್ಯ ಮಂತ್ರಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.