ಬೆಂಗಳೂರು:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ನೇಮಕಾತಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

LEAVE A REPLY

Please enter your comment!
Please enter your name here