ಬಳ್ಳಾರಿ:ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ, ವರದಿ ಇನ್ನೂ ಕೈ ಸೇರಿಲ್ಲ, ಪತ್ರಿಕೆಯಲ್ಲಿ ಓದಿದ್ದನ್ನು ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎಂದರೆ ವಾಸ್ತವಾಂಶ ಬದಲಾಗಲ್ಲ. ಈ ಬಗ್ಗೆ ನ್ಯಾಯಾಲಯವಿದೆ, ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ.‌
ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹರು. ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಗಲೂ ಸಾಕಷ್ಟು ಅಂಶಗಳನ್ನು ದಾಖಲೆ ಸಹಿತ ಮಾತನಾಡಿದ್ದೆ. ಈಗ ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.

ಆಕ್ಸಿಜನ್ ಕೊರತೆಯಿಂದ ಜನರು ಮೃತಪಟ್ಟಿರುವ ದುರ್ಘಟನೆಗಳು ನಡೆದವು. ಇದನ್ನು ಸಚಿವರಾಗಿದ್ದ ಸುಧಾಕರ್ ಅವರು ಸುಳ್ಳು ಸುಳ್ಳು ಎಂದರು. ನಾನು ಮತ್ತು ಡಿ.ಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ ಮೇಲೆ ಸರ್ಕಾರ ತನ್ನ ನಿರ್ಲಕ್ಷ್ಯ ಒಪ್ಪಿಕೊಂಡು, ಸಮಸ್ಯೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿತು.

ಶೀಘ್ರದಲ್ಲೇ ಸಿ.ಎಂ ರಾಜೀನಾಮೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಚುನಾವಣಾ ಕಾರಣಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ನಾನು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳುವವನು.
ನಾನು ಸಣ್ಣ ತಪ್ಪೂ ಮಾಡಿಲ್ಲ, ಮಾಡೋದು ಇಲ್ಲ, ಸಿ.ಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ.‌

ಯಡಿಯೂರಪ್ಪ ಅವರು 2 ಸಾವಿರ ಕೋಟಿ ಕೊಟ್ಟು ಮುಖ್ಯಮಂತ್ರಿ‌ ಆದ್ರು.‌ ಇವರ ಪುತ್ರ ವಿಜಯೇಂದ್ರ ಕೂಡ ದುಡ್ಡು ಕೊಟ್ಟೇ ಪಕ್ಷದ ಅಧ್ಯಕ್ಷ ಆಗಿದ್ದು ಅಂತ ಯತ್ನಾಳ್ ಅವರೇ ಹೇಳಿದ್ದಾರೆ. ಇವರಿಗೆ ಸಾವಿರ ಸಾವಿರ ಕೋಟಿ ಎಲ್ಲಿಂದ ಬಂತು? ಇದರ ಸತ್ಯಾಸತ್ಯತೆ ಕೂಡ ಬಯಲಾಗಬೇಕು.

ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ.

ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿಯನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುವುದಾಗಿ ಹೇಳಿ, ಈಗ ರಾಜಕೀಯಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ.

ತೋರಣಗಲ್ಲು ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here