ಬೆಂಗಳೂರು ನಗರ ಜಿಲ್ಲೆ,ನವೆಂಬರ್ 19: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ವಿಶೇಷ ಆಂದೋಲನವನ್ನು ಜಿಲ್ಲಾದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಸ್ ಲತಾಕುಮಾರಿ ಅವರು ತಿಳಿಸಿದರು.
ಅವರು ಇಂದು ತಮ್ಮ ಕಚೇರಿಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಕುರಿತು ಕರೆದಿದ್ದ ಜಿಲ್ಲಾ ಕುಡಿಯುವ ನೀರು ಮತ್ತು ನೈಮಲ್ಯ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನಾಚರಣೆಯು ಬಯಲು ಬಹಿರ್ದಸೆ ಮುಕ್ತ ಸ್ಥಿತಿಯ ಸ್ಥಾನಮಾನ ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದರು.
ಈಗಾಗಲೇ ಗುರುತಿಸಲಾದ ಶೌಚಾಲಯರಹಿತ ಕುಟುಂಬಗಳಿಗೆ ಪ್ರೋತ್ಸಾಹ ಧನ ಮಂಜೂರಾತಿ, ಕಾರ್ಯಾದೇಶ ಹಂಚಿಕೆ, ಶೌಚಾಲಯ ನಿರ್ಮಾಣ ಹಾಗೂ ಜಿಯೋ ಟ್ಯಾಗ್ ಮಾಡಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಈಗಾಗಲೇ ವೈಯಕ್ತಿಕ ಗೃಹ ಶೌಚಾಲಯಗಳ ಸಮೀಕ್ಷೆಯನ್ನು ಕೈಗೊಂಡಿದ್ದು, 700 ಶೌಚಾಲಯರಹಿತ ಕುಟುಂಬಗಳಿಗೆ ಗುರಿ ನಿಗಧಿಪಡಿಸಲಾಗಿದ್ದು, ಈ ಪೈಕಿ 362 ಪೂರ್ಣಗೊಂಡಿದ್ದು, ಬಾಕಿ ಇರುವ 338 ಶೌಚಾಲಯಗಳನ್ನು ಪೂರ್ಣಗೊಳಿಸಿ ಪ್ರಗತಿಯನ್ನು ಸಾಧಿಸುವಂತೆ ತಿಳಿಸಿದರು.
ವಿಶ್ವ ನೈಮಲ್ಯ ದಿನಾಚರಣೆ ಅಂಗವಾಗಿ ನವೆಂಬರ್ 26 ಮತ್ತು 27 ರಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಚಿತ್ರಕಲಾ, ಚರ್ಚ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ವಿಶೇಷ ಆಂದೋಲನದ ಅಂಗವಾಗಿ ಉತ್ತಮವಾಗಿ ನಿರ್ವಹಣೆ ಮಾಡುತ್ತಿರುವ ಸಮುದಾಯ ಶೌಚಾಲಯ ಅಂಗನವಾಡಿ, ಶಾಲಾ-ಕಾಲೇಜು ಶೌಚಾಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಶೌಚಾಲಯಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಉಪ ಕಾರ್ಯದರ್ಶಿಗಳಾದ ಅನಿತಾ, ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ರವೀಂದ್ರನಾಥ್ ಎಂ ಮೇಟಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.