ಬೆಂಗಳೂರು ನಗರ ಜಿಲ್ಲೆ, ಏಪ್ರಿಲ್ 22 (ಕರ್ನಾಟಕ ವಾರ್ತೆ): ಪೌರಕಾರ್ಮಿಕರು ಸಿಂಧುತ್ವ ಪ್ರಮಾಣ ಪತ್ರವನ್ನು ಪಡೆಯಲು ಜಾತಿ ದೃಢೀಕರಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ರವರು ತಿಳಿಸಿದರು.
ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿ.ಬಿ.ಎಂ.ಪಿ.) ವತಿಯಿಂದ ಆಯ್ಕೆಯಾಗಿರುವ ಪೌರಕಾರ್ಮಿಕರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ವಿತರಿಸಲು ಆಯೋಜಿಸಲಾದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿ.ಬಿ.ಎಂ.ಪಿ. ವತಿಯಿಂದ ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಕ್ಷರದ ಅರಿವು ಹೊಂದಿರಬೇಕು, ಹಾಗೂ ಸರ್ಕಾರದ ನಿಯಮಾನುಸಾರ ಎಲ್ಲಾ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದರು.
ಅಭ್ಯರ್ಥಿಗಳು ಸಿಂಧುತ್ವ ಪ್ರಮಾಣ ಪತ್ರ ನೀಡುವಾಗ ಜಾತಿ ಪ್ರಮಾಣ ಪತ್ರವನ್ನು ದೃಢೀಕರಿಸುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆಗೆ ಈಗಾಗಲೇ ಸಾಕಷ್ಟು ಅರ್ಜಿಗಳು ಬಂದಿದ್ದು, ಸಿಂಧುತ್ವ ಪ್ರಮಾಣ ಪತ್ರ ವಿತರಿಸಬೇಕಾದ ಅಭ್ಯರ್ಥಿಗಳ ಸ್ಥಳೀಯ ವಿಚಾರಣೆ ನಡೆಸಿ, ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಸಲ್ಲಿಸಿದವರ ವಿರುದ್ದ ಎಫ್.ಐ.ಆರ್ ದಾಖಲಿಸಬೇಕು ಎಂದು ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ ಅಖಿಲೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಉಪನಿರ್ದೇಶಕ ಜುಂಜಯ್ಯ, ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಶ್ರೀನಿವಾಸ್ ಹಾಗೂ ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್ ವಿಜಯ್ ಕುಮಾರ್ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.