ಬಾಗಲಕೋಟೆ ಜಿಲ್ಲೆಯ ರಬಕವಿ–ಬನಹಟ್ಟಿ ತಾಲ್ಲೂಕಿನ ರಬಕವಿಯ ಚಿತ್ತರಗಿ ಆಸ್ಪತ್ರೆಯ ಎದುರುಗಡೆಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಬನಹಟ್ಟಿಯಿಂದ ಕುಡಚಿ ಕಡೆಗೆ ತೆರಳುತ್ತಿದ್ದ ವೇಳೆ ಸಿಕಂದರ್ ನದಾಫ್ ಅವರು ತಮ್ಮ ಪತ್ನಿ ತಬಸುಮ್ ನದಾಫ್ ಹಾಗೂ ಮೂವರು ಮಕ್ಕಳೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ರಸ್ತೆಯಲ್ಲಿದ್ದ ತೆಗ್ಗು-ಗುಂಡಿಗೆ ಬೈಕ್ ಸಿಲುಕಿದ ಪರಿಣಾಮ, ತಬಸುಮ್ ನದಾಫ್ ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಅದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಕೆ.ಎ 29 ಬಿ. 9571 ನಂಬರ್ ಇರುವ ಟಿಪ್ಪರ್ ಅವರ ಮೇಲೆ ಹರಿದ ಪರಿಣಾಮ, ಮಹಿಳೆಯ ಎಡಗಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಗಾಯಾಳುವನ್ನು ತಕ್ಷಣವೇ ಮೈತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು, ರಾಜ್ಯ ಹೆದ್ದಾರಿಯಲ್ಲಿರುವ ತೆಗ್ಗು-ಗುಂಡಿಗಳೇ ಅಪಘಾತಕ್ಕೆ ಪ್ರಮುಖ ಕಾರಣವಾಗಿವೆ ಎಂದು ಆರೋಪಿಸಿದ್ದಾರೆ. ರಸ್ತೆ ನಿರ್ವಹಣೆಗೆ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ, ರಸ್ತೆ ದುರಸ್ತಿ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಸ್ಥಳೀಯ ಶಾಸಕರಾದ ಸಿದ್ದು ಕ. ಸವದಿ ಅವರ ವಿರುದ್ಧವೂ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಯಲ್ಲಿರುವ ಗುಂಡಿಗಳನ್ನು ತಕ್ಷಣ ಮುಚ್ಚಿ, ವಾಹನ ಸವಾರರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದರು.

(ವರದಿ:-
ಶಅಮಿರಖಾನ್ ಅತ್ತಾರ ಬಾಗಲಕೋಟ)

LEAVE A REPLY

Please enter your comment!
Please enter your name here