ದಾವಣಗೆರೆ: ಕೃಷಿ ಪದವಿ ಪಡೆಯುವ ವಿದ್ಯಾರ್ಥಿಗಳು ತಾವು ಕಲಿತ ಜ್ಞಾನವನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು. ರೈತರು ಸಾಂಪ್ರದಾಯಿಕ ಕೃಷಿಯ ಜೊತೆಗೆ ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು.
ಶಿವಮೊಗ್ಗ ನಗರದ ನವಿಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಕೃಷಿ ಮತ್ತು ತೋಟಗಾರಿಕೆ ಮೇಳ-2026’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೃಷಿ ಪದವಿ ಪಡೆಯುವ ವಿದ್ಯಾರ್ಥಿಗಳು ಕೇವಲ ಉದ್ಯೋಗದ ದೃಷ್ಟಿಯಿಂದ ಶಿಕ್ಷಣ ಪಡೆಯದೆ, ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳುವ ಮೂಲಕ ರೈತರಿಗೆ ನೆರವಾಗಬೇಕು. ವಿಶ್ವವಿದ್ಯಾಲಯದಲ್ಲಿ ಕಲಿತ ವೈಜ್ಞಾನಿಕ ಜ್ಞಾನವನ್ನು ಗ್ರಾಮೀಣ ಪ್ರದೇಶದ ರೈತರಿಗೆ ತಲುಪಿಸುವ ಜವಾಬ್ದಾರಿ ವಿದ್ಯಾರ್ಥಿಗಳು ಹಾಗೂ ಕೃಷಿ ವಿಜ್ಞಾನಿಗಳ ಮೇಲಿದೆ. ಮಣ್ಣಿನ ಗುಣಮಟ್ಟ, ಹವಾಮಾನ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಬೆಳೆ ಆಯ್ಕೆ ಮಾಡಿಕೊಂಡು ಕೃಷಿ ಮಾಡಿದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.
ರೈತರು ಒಂದೇ ಬೆಳೆಗೆ ಸೀಮಿತವಾಗದೆ ಕೃಷಿಯೊಂದಿಗೆ ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ ಸೇರಿದಂತೆ ಉಪಕಸುಬುಗಳನ್ನು ಕೈಗೊಳ್ಳಬೇಕು. ಇದರಿಂದ ಕೃಷಿಯ ಮೇಲಿನ ಆರ್ಥಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಆದಾಯದ ಮೂಲಗಳು ಹೆಚ್ಚಾಗಲಿವೆ. ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ರೈತರಿಗೆ ನಿರಂತರ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಬಳಿಕ ಮೇಳದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿದ ಸಚಿವರು, ಮೀನುಗಾರಿಕೆಗೆ ಸಂಬಂಧಿಸಿದ ಮಳಿಗೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಜಾತಿಯ ಮೀನುಗಳು, ಮೀನು ಸಾಕಾಣಿಕೆಗೆ ಅಗತ್ಯವಿರುವ ಉಪಕರಣಗಳು, ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮೀನು ಸಾಕಾಣಿಕೆ ಪದ್ಧತಿಗಳ ಕುರಿತು ಮಾಹಿತಿ ಪಡೆದುಕೊಂಡರು.
ಮೀನುಗಾರಿಕೆ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಮೀನು ಸಾಕಾಣಿಕೆ ಮಾಡಿದರೆ ರೈತರು ಉತ್ತಮ ಆದಾಯ ಗಳಿಸಲು ಸಾಧ್ಯವಿದೆ. ಕೃಷಿಯೊಂದಿಗೆ ಮೀನುಗಾರಿಕೆಯನ್ನು ಉಪಕಸುಬಾಗಿ ಬೆಳೆಸಲು ಇಂತಹ ಮೇಳಗಳು ಪ್ರೇರಣೆ ನೀಡುತ್ತವೆ. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಮೀನು ಸಾಕಾಣಿಕೆಗೆ ಉತ್ತೇಜನ ನೀಡುತ್ತಿದ್ಸು, ಈ ಮೂಲಕ ರೈತರ ಆರ್ಥಿಕ ಸಬಲೀಕರಣ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳ ಅಭಿವೃದ್ಧಿಗೆ ಇಂತಹ ಮೇಳಗಳು ಸಹಕಾರಿಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಿದರು. ವಿಶ್ವವಿದ್ಯಾಲಯದ ಕುಲಪತಿ ಧನಂಜಯ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಗರದ ಮಹಾದೇವಪ್ಪ, ಸೂಡಾ ಅಧ್ಯಕ್ಷ ಮಧುಸೂಧನ್, ನಾಮನಿರ್ದೇಶಿತ ಸದಸ್ಯರಾದ ದೇವಿಪ್ರಸಾದ್, ಶಶಾಂಕ್, ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ವಿಜ್ಞಾನಿಗಳು, ರೈತರು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.





