ದಾವಣಗೆರೆ, ಜಗಳೂರು:- ಶರಣ ತತ್ವದ ಮಹತ್ವ ಹಾಗೂ ಬಸವಣ್ಣನವರ ಸಾಮಾಜಿಕ, ಧಾರ್ಮಿಕ ಚಿಂತನೆಗಳ ಆಳವನ್ನು ಅರಿಯದವರು ಇಂತಹ ಕೃತಿಗಳನ್ನು ರಚಿಸುತ್ತಾರೆ. ಇಂತಹ ಕೃತಿಗಳಿಗೆ ಪ್ರೋತ್ಸಾಹ ನೀಡಿರುವ ವಿಶ್ವೇಶ್ವರ ಭಟ್ ಅವರ ನಡೆ ಕೂಡ ಸರಿಯಲ್ಲ. ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿರುವ ಈ ಕೃತಿಯನ್ನು ಸರ್ಕಾರ ಕೂಡಲೇ ಮುಟ್ಟುಗೋಲು ಹಾಕಿಕೊಂಡು, ಕೃತಿಯ ರಚನೆ ಹಾಗೂ ಪ್ರಕಟಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಗ್ರಹಿಸಿದರು.

ಭಾನುವಾರ ರಾತ್ರಿ ದಾವಣಗೆರೆ ಜಿಲ್ಲೆಯ ಪಟ್ಟಣದ ಬಯಲು ರಂಗಮಂದಿರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಶಿವಸಂಚಾರ ನಾಟಕೋತ್ಸವದ ಸಮಾರೋಪ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಬಸವಣ್ಣನವರ ಕುರಿತು ರವಿ ಹಂಜೆ ಅವರು ತಮ್ಮ ಕೃತಿಯಲ್ಲಿ ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿರುವುದು ಖಂಡನೀಯ. ಬಸವಣ್ಣನವರು ಲೂಟಿ ಮಾಡಿದ್ದಾರೆ, ಬಿಜ್ಜಳನನ್ನು ಕೊಲೆ ಮಾಡಿಸಿದ್ದಾರೆ ಎಂಬಂತಹ ಆರೋಪಗಳನ್ನು ಕೃತಿಯಲ್ಲಿ ಉಲ್ಲೇಖಿಸುವ ಮೂಲಕ ಶರಣರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಶರಣ ಪರಂಪರೆಯ ಇತಿಹಾಸ, ತತ್ವಾದರ್ಶ ಹಾಗೂ ಸಾಮಾಜಿಕ ಕೊಡುಗೆಗಳ ಅರಿವಿಲ್ಲದವರು ಇಂತಹ ಬರಹಗಳಿಗೆ ಮುಂದಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಸಮಾಜದಲ್ಲಿದ್ದ ಅಸಮಾನತೆ, ಜಾತಿಭೇದ, ಮೂಢನಂಬಿಕೆ ಹಾಗೂ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಜಗತ್ತಿಗೆ ಸಾರಿದ ಮಹಾನ್ ಮಾನವತಾವಾದಿ. ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡು, ಎಲ್ಲರಿಗೂ ಗೌರವಯುತ ಬದುಕು ದೊರೆಯಬೇಕು ಎಂಬ ಆಶಯದೊಂದಿಗೆ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದವರು. ಅಂತಹ ಮಹಾನ್ ಶರಣರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹದ್ದು ಎಂದರು.
ಶಿವಸಂಚಾರ ನಾಟಕೋತ್ಸವವು ಅತ್ಯಂತ ಯಶಸ್ವಿಯಾಗಿ ನಡೆದಿರುವುದು ಸಂತಸದ ಸಂಗತಿ. ಈ ವೇದಿಕೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಒಟ್ಟಾಗಿ ಕುಳಿತು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಾರ್ವಜನಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ವೇದಿಕೆ ಹಂಚಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಬಿ. ದೇವೇಂದ್ರಪ್ಪ, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ ಹಾಗೂ ಎಚ್.ಪಿ. ರಾಜೇಶ್ ಮಾತನಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್‌ಟಿ ಘಟಕದ ಮಾಜಿ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್‌ಟಿ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್, ಇಂಧನ ನಿಗಮದ ನಿರ್ದೇಶಕ ಕಲಂದರ್ ಖಾನ್ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

(ವರದಿ‌:- ಎಂ.ಡಿ. ಅಬ್ದುಲ್ ರಖೀಬ್)

LEAVE A REPLY

Please enter your comment!
Please enter your name here