ಬೆಂಗಳೂರು ನಗರ ಜಿಲ್ಲೆ, ಜೂನ್ 24: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸಂಬಂಧಿಸಿದಂತೆ ಕುಂದುಕೊರತೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕೂಡಲೇ ಅದನ್ನು ಬಗೆಹರಿಸಲು ಕ್ರಮ ವಹಿಸಬೇಕು. ತಪ್ಪಿದಲ್ಲಿ ಅತಂಹ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ. ಎಸ್ ಅವರು ಎಚ್ಚರಿಕೆ ನೀಡಿದರು.
ಅವರು ಇಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕೃತ್ಯಗಳನ್ನು ನಿಯಂತ್ರಿಸುವ ಕುರಿತು ಕರೆಯಲಾಗಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಸ್ಯೆಗಳನ್ನು ಬಗೆ ಹರಿಸಿಲು ಇಂದು ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಆದರೆ, ಕೆಲವು ಅಧಿಕಾರಿಗಳು ಸಭೆಗೆ ಗೈರು ಹಾಜರಾಗಿರುವುದು ತುಂಬ ಬೆಸರದ ಸಂಗತಿ. ಸಭೆಗೆ ಗೈರುಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಗೆ ಬರುವ ಅಧಿಕಾರಿಗಳು ಸರಿಯಾದ ಮಾಹಿತಿಯೊಂದಿಗೆ ಹಾಜರಾಗಬೇಕು, ಸಭೆಗೆ ಅಂಕಿ ಅಂಶಗಳೊಂದಿಗೆ ಬರಬೇಕು . ಅದಿಲ್ಲದೆ ಈ ಸಭೆಯನ್ನು ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಅಭಿಪ್ರಾಯ ಪಟ್ಟರು.
ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ಬರುವ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತವಾಗಿ ಎಫ್.ಐ.ಆರ್. ದಾಖಲಿಸಿ ವರದಿ ಸಲ್ಲಿಸಲು ಠಾಣಾಧಿಕಾರಿಗಳು ಕ್ರಮವಹಿಸಬೇಕು ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಎಫ್.ಐ.ಆರ್. ಜೊತೆಗೆ ನಿಗದಿತ ಅವಧಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಈ ಕುರಿತಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ತಡವಾದರೆ ನೊಂದವರಿಗೆ ಪರಿಹಾರ ನೀಡಿಕೆಯಲ್ಲಿ ವಿಳಂಬವಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ದಲಿತ್ ಸಂಘದ ಸದಸ್ಯರು ಉಪಸ್ಥಿತರಿದ್ದರು





