ಕಲಬುರಗಿ: ಸಣ್ಣ ಸಣ್ಣ ಕಾಯಕ ಸಮಾಜಗಳ ಪರವಾಗಿ ನಾವಿದ್ದೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ, ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಸದಸ್ಯರು ಮತ್ತು ನಿರ್ದೇಶಕರ ನೇಮಕಾತಿಯಲ್ಲಿ ಹಡಪದ ಅಪ್ಪಣ್ಣ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಮಾಜದ ಸೇವಕರಾದ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಹಡಪದ ಅಪ್ಪಣ್ಣ ಸಮಾಜವು ವಿವಿಧ ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುತ್ತಾ ಬಂದಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷವೂ ಸಮಾಜದ ಮತಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆಯೇ ಹೊರತು, ಅಧಿಕಾರ ಹಂಚಿಕೆ ಹಾಗೂ ರಾಜಕೀಯ ಪ್ರಾತಿನಿಧ್ಯ ನೀಡುವ ಸಂದರ್ಭದಲ್ಲಿ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ನಿಗಮ ಮಂಡಳಿಗಳ ನೇಮಕಾತಿಯಲ್ಲಿ ರಾಜ್ಯದ ಹಡಪದ ಅಪ್ಪಣ್ಣ ಸಮಾಜದ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡದಿರುವುದು ಖಂಡನೀಯ. ವಿಶೇಷವಾಗಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಒಬ್ಬರಿಗೂ ಅವಕಾಶ ಕಲ್ಪಿಸದಿರುವುದು ಜಿಲ್ಲೆಯ ಸಮಾಜ ಬಾಂಧವರಿಗೆ ತೀವ್ರ ನೋವುಂಟು ಮಾಡಿದೆ. ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ ಕಾಂಗ್ರೆಸ್ ಪಕ್ಷದಲ್ಲಿರುವ ಸಮಾಜದ ಮುಖಂಡರು ಧ್ವನಿ ಎತ್ತದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಡಪದ ಅಪ್ಪಣ್ಣ ಸಮಾಜವು ಸಣ್ಣ ಕಾಯಕ ಸಮಾಜಗಳಲ್ಲಿ ಒಂದಾಗಿದ್ದು, ಸಮಾಜದ ಅಭಿವೃದ್ಧಿ ಮತ್ತು ಕಲ್ಯಾಣದ ಬಗ್ಗೆ ಕೇವಲ ಮೊಸಳೆ ಕಣ್ಣೀರು ಸುರಿಸುವುದನ್ನು ಬಿಟ್ಟು, ಕಾಂಗ್ರೆಸ್ ಸರ್ಕಾರ ನಿಜವಾದ ಕಾಳಜಿಯಿಂದ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ, ಸೂಕ್ತ ಸ್ಥಾನಮಾನ ಹಾಗೂ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕು.

ಇನ್ನಾದರೂ ರಾಜ್ಯ ಸರ್ಕಾರ ಹಡಪದ ಅಪ್ಪಣ್ಣ ಸಮಾಜದ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಿ, ನಿಗಮ ಮಂಡಳಿಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಹಡಪದ ಅಪ್ಪಣ್ಣ ಸಮಾಜದ ಜನರು ತಮ್ಮ ಒಗ್ಗಟ್ಟು ಮತ್ತು ಶಕ್ತಿಯನ್ನು ತೋರಿಸುವ ಮೂಲಕ ಅನ್ಯಾಯ ಮಾಡಿದವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here